ತ್ರಾಸಿ–ಮರವಂತೆ ಬೀಚ್ ಅಭಿವೃದ್ಧಿ ಕಾಮಗಾರಿ 3–4 ತಿಂಗಳಲ್ಲಿ ಪೂರ್ಣ : ಸಚಿವ ಕೆ.ಜೆ. ಜಾರ್ಜ್

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಅಂಚಿನಲ್ಲಿ ಸಮುದ್ರ ಮತ್ತು ಸೌಪರ್ಣಿಕಾ ನದಿ ನಡುವೆ ಇರುವ ತ್ರಾಸಿ–ಮರವಂತೆ ಬೀಚ್‌ನ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಪೂರ್ಣಗೊಳಿಸಿ ಪ್ರವಾಸಿಗರಿಗೆ ಅಗತ್ಯ ಸೌಲಭ್ಯ ಒದಗಿಸಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ಸೋಮವಾರ ತ್ರಾಸಿ ಬೀಚ್‌ಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.

ತ್ರಾಸಿ ಬೀಚ್‌ನಲ್ಲಿ ಪಾರ್ಕಿಂಗ್, ಫುಡ್‌ಕೋರ್ಟ್, ಸೈಕಲ್ ಟ್ರ್ಯಾಕ್, ಬಯಲು ರಂಗಮಂದಿರ ಸೇರಿದಂತೆ ವಿವಿಧ ಕಾಮಗಾರಿಗಳು ₹9.95 ಕೋಟಿ ವೆಚ್ಚದಲ್ಲಿ ಕಳೆದ ಎರಡು ವರ್ಷಗಳಿಂದ ನಡೆಯುತ್ತಿವೆ. ಕಾಮಗಾರಿಗಳಿಗೆ ವೇಗ ನೀಡಿ ಶೀಘ್ರ ಪೂರ್ಣಗೊಳಿಸಲಾಗುವುದು ಎಂದರು.
ಬೀಚ್‌ಗಳಲ್ಲಿ ಕುಡಿಯುವ ನೀರು, ಬೆಳಕಿನ ವ್ಯವಸ್ಥೆ, ಸುಸಜ್ಜಿತ ಶೌಚಗೃಹ, ಪಾರ್ಕಿಂಗ್ ಹಾಗೂ ಆಸನದಂತಹ ಸೌಲಭ್ಯಗಳನ್ನು ಕಲ್ಪಿಸುವುದರಿಂದ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರೆಯುವುದರ ಜತೆಗೆ ಸ್ಥಳೀಯರಿಗೆ ಉದ್ಯೋಗಾವಕಾಶಗಳು ಹೆಚ್ಚಲಿವೆ. ಈ ನಿಟ್ಟಿನಲ್ಲಿ ಸರ್ಕಾರ ಆದ್ಯತೆ ನೀಡಲಿದೆ ಎಂದು ತಿಳಿಸಿದರು. ಬೀಚ್‌ನಿಂದ ಹೋಟೆಲ್‌ಗಳಿಗೆ ಸಂಪರ್ಕ ಕಲ್ಪಿಸಲು ರಾಷ್ಟ್ರೀಯ ಹೆದ್ದಾರಿ ಮೇಲೆ ಸ್ಕೈವಾಕ್ ನಿರ್ಮಿಸುವ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುವುದು. ಅಭಿವೃದ್ಧಿ ಕಾಮಗಾರಿಗಳಲ್ಲಿ ಅನಗತ್ಯ ವೆಚ್ಚಕ್ಕೆ ಅವಕಾಶ ನೀಡದೆ ಸಾರ್ವಜನಿಕರು ಮತ್ತು ಪ್ರವಾಸಿಗರ ಅಗತ್ಯಕ್ಕೆ ಅನುಗುಣವಾಗಿ ಯೋಜನೆ ರೂಪಿಸಲಾಗುವುದು ಎಂದರು. ತ್ರಾಸಿ–ಮರವಂತೆ ಬೀಚ್‌ಗಳ ಸುಮಾರು 1.5 ಕಿ.ಮೀ. ವ್ಯಾಪ್ತಿಯಲ್ಲಿ ಸೂಕ್ತ ತಡೆಬೇಲಿ ಇಲ್ಲದಿರುವುದರಿಂದ ಪ್ರವಾಸಿಗರು ಹೆದ್ದಾರಿ ಬದಿಯಲ್ಲಿ ವಾಹನ ನಿಲ್ಲಿಸಿ ಬೀಚ್‌ಗೆ ತೆರಳುತ್ತಿದ್ದಾರೆ. ಪ್ರವಾಸಿಗರ ಸುರಕ್ಷತೆಗಾಗಿ ಸ್ಥಳೀಯ ಜೀವರಕ್ಷಕರಿಗೆ ಅಗತ್ಯ ತರಬೇತಿ ನೀಡಿ ನಿಯೋಜಿಸಲಾಗುವುದು ಎಂದು ಸಚಿವರು ಹೇಳಿದರು.

ಉಡುಪಿ ಶ್ರೀಕೃಷ್ಣ ಮಠ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸೇರಿದಂತೆ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮತ್ತು ಭಕ್ತರು ಆಗಮಿಸುತ್ತಿದ್ದಾರೆ. ಈ ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಿ ವ್ಯವಸ್ಥಿತ ಮೂಲಸೌಕರ್ಯ ಕಲ್ಪಿಸಲಾಗುವುದು ಎಂದರು. ಮಾಜಿ ಶಾಸಕ ಗೋಪಾಲ ಪೂಜಾರಿ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ರಾಮ್‌ಪ್ರಸಾದ್ ಮನೋಹರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಸಹಾಯಕ ನಿರ್ದೇಶಕಿ ವಿಂಧ್ಯಾ ಎನ್.ಎಂ. ಮತ್ತಿತರರು ಉಪಸ್ಥಿತರಿದ್ದರು.

Related Articles